ಉಡುಪಿ, ಸೆ. 29: ಉಡುಪಿ ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳ ಗ್ರಾಮಾಂತರ ಪ್ರದೇಶಗಳಲ್ಲಿ ದಾರಿದೀಪಗಳ ಅವ್ಯವಸ್ಥೆ ತಲೆದೋರಿದ್ದು, ಸಮಸ್ಯೆಯನ್ನು ತುರ್ತಾಗಿ ಪರಿಹರಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಲಾಯಿತು.
ನಗರಸಭೆಯ ಗ್ರಾಮಾಂತರ ಪ್ರದೇಶಗಳಲ್ಲಿ ಕಳೆದ ಹಲವು ದಿನಗಳಿಂದ ಹಲವಾರು ದಾರಿದೀಪಗಳು ಹದಗೆಟ್ಟಿದ್ದು, ರಸ್ತೆಯ ಡಿವೈಡರ್‌ಗಳಲ್ಲಿ ಅಳವಡಿಸಿರುವ ಮಿನಿ ಹೈಮಾಸ್ಟ್ ದೀಪಗಳು ಪದೇಪದೇ ಕೆಟ್ಟುಹೋಗುತ್ತಿವೆ. ಸಮರ್ಪಕ ನಿರ್ವಹಣೆಯ ಕೊರತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ದಾರಿದೀಪಗಳ ಸಮಸ್ಯೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದಿದ್ದರೂ, ಈವರೆಗೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ. ಅಲ್ಲದೆ, ದಾರಿದೀಪಗಳ ನಿರ್ವಹಣೆಗೆ ಸಂಬಂಧಿಸಿದ ಟೆಂಡರ್ ಗುತ್ತಿಗೆದಾರರಿಗೆ ದಂಡ ವಿಧಿಸಿ, ಅವರಿಂದ ಸಮರ್ಪಕವಾಗಿ ಕೆಲಸ ಮಾಡಿಸಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಆದ್ದರಿಂದ ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರದ ಹಿತದೃಷ್ಟಿಯಿಂದ ದಾರಿದೀಪಗಳ ಅವ್ಯವಸ್ಥೆಯನ್ನು ಶೀಘ್ರವಾಗಿ ಸರಿಪಡಿಸಿ, ಸಮರ್ಪಕ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಕಾಂಗ್ರೆಸ್ ನಾಯಕರಾದ ಮೀನಾಕ್ಷಿ ಮಾಧವ ಬನ್ನಂಜೆ, ಗಣೇಶ್ ನೆರ್ಗಿ, ಸುಕೇಶ್ ಕುಂದರ್, ಸತೀಶ್ ಕುಮಾರ್ ಮಂಚಿ, ಸಂಧ್ಯಾ ತಿಲಕ್‌ರಾಜ್, ಭರತ್ ಕುಮಾರ್, ರಮೇಶ್ ಪಾಲ್ ಹಾಗೂ ಸಂಜಯ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.


