ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ತಕ್ಷಣ ಮುಂದುವರಿಸಿ ಪೂರ್ಣಗೊಳಿಸಬೇಕು ಹಾಗೂ ಸಾರ್ವಜನಿಕರ ವೀಕ್ಷಣೆಗೆ ಥೀಮ್ ಪಾರ್ಕ್ನ್ನು ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಪರಶುರಾಮ ಥೀಮ್ ಪಾರ್ಕ್ ಜನಾಗ್ರಹ ಸಮಿತಿ ವತಿಯಿಂದ ಅ.9ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಬೃಹತ್ ಸಾರ್ವಜನಿಕ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.
ಬೈಲೂರು ಮಾರಿಗುಡಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಜನಾಗ್ರಹ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.ಸಭೆಯಲ್ಲಿ ಮಾತನಾಡಿದ ಸಮಿತಿಯ ಪ್ರಮುಖರು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಮಿತ್ ಶೆಟ್ಟಿ, ಪರಶುರಾಮನ ಮೂರ್ತಿಯನ್ನು ಶೀಘ್ರ ಪೂರ್ಣಗೊಳಿಸಿ ಪ್ರತಿಷ್ಠಾಪಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಬೃಹತ್ ಸಾರ್ವಜನಿಕ ಮನವಿ ಸಲ್ಲಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅ.9ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಕಳ ಮತ್ತು ಬೈಲೂರು ಭಾಗದ ಸಾರ್ವಜನಿಕರು ಸಹಸ್ರಾರು ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಆಡಳಿತ ಹಾಗೂ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಐದು ಪ್ರಮುಖ ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಪರಶುರಾಮ ಥೀಮ್ ಪಾರ್ಕ್ಗೆ ಸಾರ್ವಜನಿಕರು ತೆರಳಲು ವಿಧಿಸಿರುವ ನಿರ್ಬಂಧವನ್ನು ತಕ್ಷಣ ತೆರವುಗೊಳಿಸಬೇಕು, ಪರಶುರಾಮನ ಮೂರ್ತಿಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಬೇಕು, ಸ್ಥಳೀಯ ಆರ್ಥಿಕತೆ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಯ ದೃಷ್ಟಿಯಿಂದ ಬೈಲೂರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಿರ್ಣಯಿಸಲಾಯಿತು.
ಮೂರ್ತಿಯನ್ನು ತಕ್ಷಣ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ, ಭಕ್ತರ ಹಾಗೂ ಸಾರ್ವಜನಿಕರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಿರುವ ಮೂರ್ತಿಯ ಸೊಂಟದ ಕೆಳಗಿನ ಅರ್ಧ ಭಾಗವನ್ನು ಸ್ಥಳದಿಂದ ತೆರವುಗೊಳಿಸಬೇಕು. ಅಲ್ಲದೆ, ಥೀಮ್ ಪಾರ್ಕ್ನ ಆಡಿಟೋರಿಯಂ, ಭಜನಾ ಮಂದಿರ ಹಾಗೂ ಸುತ್ತಮುತ್ತಲಿನ 360 ಡಿಗ್ರಿ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ ಯಾವುದೇ ಅಡೆತಡೆಯಿಲ್ಲದೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.
ಸಮಿತಿ ಅಧ್ಯಕ್ಷ ಶೆಟ್ಟಿ ಅವರ ಜನಾಗ್ರಹ ಸಚ್ಚಿದಾನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡ ಮಹೇಶ್ ಬೈಲೂರು ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಸಭೆಗೆ ಆಗಮಿಸಿದ ಕಾಂಗ್ರೆಸ್ ನಾಯಕರಿಗೆ ಬೈಲೂರಿನ ಗ್ರಾಮಸ್ಥರಿಂದ ಘೇರಾವ್:
ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ಮುಂದುವರಿಸಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸುವಂತೆ ಆಗ್ರಹಿಸಿ ಪಕ್ಷಾತೀತವಾಗಿ ಆಯೋಜಿಸಲಾಗಿದ್ದ ಜನಾಗ್ರಹ ಸಭೆ ಆರಂಭವಾಗುತ್ತಿದ್ದಂತೆ ಕಾರ್ಕಳ ಕಾಂಗ್ರೆಸ್ ನಾಯಕರ ತಂಡ ಸಭಾಂಗಣಕ್ಕೆ ಆಗಮಿಸಿತು. ಆದರೆ ಥೀಮ್ ಪಾರ್ಕ್ನ ಇಂದಿನ ಪರಿಸ್ಥಿತಿಗೆ ಕಾಂಗ್ರೆಸ್ ನಾಯಕರೇ ಕಾರಣ ಎಂಬ ಆರೋಪ ಮಾಡಿರುವ ಗ್ರಾಮಸ್ಥರು, ಅವರಿಗೆ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಲಿಲ್ಲ.
ಈ ವೇಳೆ ಕಾಂಗ್ರೆಸ್ ನಾಯಕರು ಹಾಗೂ ಗ್ರಾಮಸ್ಥರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿದ ಬಳಿಕ ಕಾಂಗ್ರೆಸ್ ನಾಯಕರು ಅಲ್ಲಿಂದ ತೆರಳಿ ಮಾರಿಗುಡಿ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ವಾಪಸ್ಸಾದರು.
ಸುನಿಲ್ ಕುಮಾರ್ ಅವರ ಕನಸಿನ ಯೋಜನೆ:
ಕಾರ್ಕಳವನ್ನು ರಾಷ್ಟ್ರೀಯ ಪ್ರವಾಸೋದ್ಯಮ ಭೂಪಟದಲ್ಲಿ ಗುರುತಿಸುವ ಉದ್ದೇಶದಿಂದ ಅಂದಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಅವರ ಪರಿಕಲ್ಪನೆಯಲ್ಲಿ ಪರಶುರಾಮ ಥೀಮ್ ಪಾರ್ಕ್ ಯೋಜನೆ ರೂಪಿಸಲಾಗಿತ್ತು.
ಯೋಜನೆಯ ಅನುಷ್ಠಾನದ ತಾಂತ್ರಿಕ ಹಂತದಲ್ಲಿ ಲೋಪದೋಷಗಳು ಹಾಗೂ ಕಾರ್ಯಗತಗೊಳಿಸುವ ಪ್ರಕ್ರಿಯೆಯಲ್ಲಿ ಆಡಳಿತಾತ್ಮಕ ಹಿನ್ನಡೆಗಳು ಉಂಟಾಗಿವೆ ಎಂದು ಸಮಿತಿ ಆರೋಪಿಸಿದೆ. ಪರಶುರಾಮ ಥೀಮ್ ಪಾರ್ಕ್ ಕುರಿತು ಕಾಂಗ್ರೆಸ್ ನಾಯಕರು ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿರುವ ಜನಾಗ್ರಹ ಸಮಿತಿ, ಇದೇ ಕಾರಣಕ್ಕೆ ಅವರಿಗೆ ಸಭೆಗೆ ಪ್ರವೇಶ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

